ಮೈಸೂರು ದಸರಾ : ರಾಷ್ಟ್ರಪತಿಗಳಿಗೆ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್
ಸೆಪ್ಟೆಂಬರ್ 22, 2022
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗುರುವಾರ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
ಸೆ.26 ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಇದೇ ಪ್ರಥಮಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿರುವುದು ಕನ್ನಡ ನಾಡಿಗೆ ಹೆಮ್ಮೆಯ ವಿಷಯವಾಗಿದೆ.
ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ರಾಜ್ಯ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ.