ಮೇಲುಕೋಟೆ ಕ್ಷೇತ್ರದಿಂದ ರೈತಸಂಘದ (ರೈತಬಣ) ಅಭ್ಯರ್ಥಿಯಾಗಿ ಇ.ಎನ್.ಕೃಷ್ಣೇಗೌಡ ಸ್ಪರ್ಧೆ

ಬೆಂಬಲ ಕೋರಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ 

ಬೆಂಗಳೂರು : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ಅಭ್ಯರ್ಥಿಯಾಗಿ ಸಂಘದ ರಾಜ್ಯಾಧ್ಯಕ್ಷ ಇ.ಎನ್.ಕೃಷ್ಣೇಗೌಡ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಮುಖಂಡರೂ ಆದ ಮಾಜಿ ಸಚಿವ ಎನ್.ಚಲುವರಾಯ ಸ್ವಾಮಿ ಅವರನ್ನು ಭೇಟಿ ಮಾಡಿ ತಮಗೆ ಬೆಂಬಲ ಕೋರಿದರಲ್ಲದೇ ಮಾತುಕತೆಯನ್ನೂ ನಡೆಸಿದರು.

ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದ 224 ಕ್ಷೇತ್ರಗಳಲ್ಲೂ ತಮ್ಮ ಸಂಘಟನೆಯ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಪ್ರಭಲವಾದ ಅಭ್ಯರ್ಥಿಗಳನ್ನು ನಿಲ್ಲಿಸಲಾಗುವುದು ಎಂದರು.
ನಾನು ಮೂಲತಃ ಪಾಂಡವಪುರ ತಾಲ್ಲೂಕಿನವನಾಗಿದ್ದು, ನಮ್ಮ ತಾಲ್ಲೂಕು ಮೇಲುಕೋಟೆ ವಿಧಾನ ಸಭಾ ಕ್ಷೇತ್ರಕ್ಕೆ ಬರುವ ಕಾರಣ ಅಲ್ಲಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ. ಉಳಿದಂತೆ ಜಿಲ್ಲೆಯ 6 ಕಡೆ ಪ್ರಭಲ ಸ್ಪರ್ಧಿಗಳು ನಮ್ಮ ಸಂಘಟನೆಯಿಂದ ಸ್ಪರ್ಧಿಸುತ್ತಿದ್ದಾರೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಇದಕ್ಕೂ ಮುನ್ನ ಅವರು ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಶೀಘ್ರವಾಗಿ ಗುಣಮುಖರಾಗಿ ಎಂದು ಹಾರೈಸಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು