ಪ್ರವಾಸಕ್ಕೆ ಹೊರಟಿದ್ದ ಶಾಲಾ ಬಸ್‌ ಪಲ್ಟಿ: ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಏಳು ಜನರಿಗೆ ಗಾಯ

ಬೇಲೂರು: ಶಾಲಾ ಮಕ್ಕಳು ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಏಳು ಜನರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಹೊರವಲಯದ ಕುವೆಂಪುನಗರದ ಸಮೀಪ ಶನಿವಾರ ಬೆಳಿಗ್ಗೆ ನಡೆದಿದೆ.
ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರನ್ನು ಬೇಲೂರು ಮತ್ತು ಹಾಸನದ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಕಳಿಸಲಾಗಿದ್ದು, ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಬೇಲೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಕನಕಪುರದಿಂದ ಬುಧವಾರ ಎರಡು ಬಸ್ಗಳಲ್ಲಿ ಪ್ರವಾಸ ಹೊರಟಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 71 ಮಂದಿ ಪ್ರವಾಸ ಮುಗಿಸಿ ಹಿಂದಿರುಗಿ ಬರುವಾರ ಶನಿವಾರ ಬೆಳಿಗ್ಗೆ ಸುಮಾರು ೭ ಗಂಟೆಗೆ ಈ ದುರ್ಘಟನೆ ನಡೆದಿದೆ.  ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.