ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಜಾಬ್‌ ಕಾರ್ಡ್‌: ನರೇಗಾದಲ್ಲಿ ಕೆಲಸ ಮಾಡಲು ಅವಕಾಶ

 ಮೈಸೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಲಿಂಗತ್ವ ಅಲ್ಪ ಸಂಖ್ಯಾತರಿಗೂ ಪ್ರತ್ಯೇಕ ಜಾಬ್ ಕಾರ್ಡ್ ನೀಡುವ ಮೂಲಕ ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡಿ ಕೂಲಿ ಪಡೆಯಬಹುದು ಎಂದು ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ.ಎಂ.ಕೃಷ್ಣಂರಾಜು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಮತದಾರರ ಜಾಗೃತಿ ಕಾರ್ಯಕ್ರಮದ ಸಭೆಯಲ್ಲಿ ಅವರು ಮಾತನಾಡಿದರು.
ಕೆಲಸದ ಸ್ಥಳದಲ್ಲಿ ಯಾವುದೇ ಬೇಧ-ಭಾವವಿಲ್ಲದೇ ದುಡಿಯಲು ಅವಕಾಶವಿದೆ. 309 ರೂ. ಕೂಲಿ ಮೊತ್ತ ನೀಡಲಾಗುತ್ತದೆ. ನರೇಗಾದಡಿ ದೊರಕುವ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನುಹಾಗೂ ತಮ್ಮ ಹತ್ತಿರದ ಗ್ರಾಪಂ ಗಳಿಗೆ ಭೇಟಿ  ನೀಡಿ ಜಾಬ್ ಕಾರ್ಡ್ ಪಡೆದು ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸರಿಯಾದ ಮಾಹಿತಿಯೊಂದಿಗೆ ಮತದಾರರ ಗುರುತಿನ ಚೀಟಿ ಪಡೆದರೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅವಕಾಶವಾಗುತ್ತದೆ. ಜಿಲ್ಲೆಯ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರಿಗೂ ಮತದಾರರ ಚೀಟಿ ಕೊಡಿಸುವ ಉದ್ದೇಶದಿಂದ ಸಭೆ ಆಯೋಜಿಸಲಾಗಿದೆ. ಈಗಾಗಲೇ ಕೆಲವರು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ. ಪಡೆಯದೇ ಇರುವವರು ಮತದಾರರ ಚೀಟಿ ಪಡೆಯಿರಿ, ಇದರಿಂದ ಸೂಕ್ತ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅನುಕೂಲವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ತಿಳಿಸಿದರು.
ಸ್ವ-ಸಹಾಯ ಸಂಘಗಳಂತೆ ಲಿಂಗತ್ವ ಅಲ್ಪ ಸಂಖ್ಯಾತರ ಸಂಘ ನಿರ್ಮಿಸಿಕೊಳ್ಳಲು ಗ್ರಾಮೀಣ ಪ್ರದೇಶಗಳಲ್ಲಿ ಅವಕಾಶವಿದೆ. ಅಲ್ಲದೇ ಲಿಂಗತ್ವ ಅಲ್ಪ ಸಂಖ್ಯಾತರು ಸ್ವಾವಲಂಬಿ ಜೀವನ ನಡೆಸಲು ಸ್ವ-ಸಹಾಯ ಸಂಘಗಳು ಸಹಾಯಕವಾಗುತ್ತವೆ. ಅದರಂತೆ ಲಿಂಗತ್ವ ಅಲ್ಪ ಸಂಖ್ಯಾತರು ಸಂಘ ನಿರ್ಮಿಸಿಕೊಳ್ಳುವ ಮೂಲಕ ಇತರೆ ಸೌಲಭ್ಯಗಳನ್ನು ಪಡೆಯುವ ಜತೆಗೆ ಆರ್ಥಿಕವಾಗಿ ಸಬಲರಾಗಬಹುದು ಎಂದರು.
ಸ್ವೀಪ್ ಸಮಿತಿಯ ಸಹಾಯಕ ಕಾರ್ಯದರ್ಶಿಗಳಾದ ಕೃಷ್ಣ ಹಾಗೂ ಕೆ.ಎನ್.ಪ್ರವೀಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಬಿ.ಬಸವರಾಜು ಸೇರಿದಂತೆ ಎಲ್ಲಾ ತಾಲ್ಲೂಕಿನ ಲಿಂಗತ್ವ ಅಲ್ಪ ಸಂಖ್ಯಾತರ ಸಮುದಾಯದ ಮುಖ್ಯಸ್ಥರು ಹಾಜರಿದ್ದರು
.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು