ಶಾಗ್ಯದಲ್ಲಿ ಬಸ್‌ ತಡೆದು ವಿದ್ಯಾರ್ಥಿಗಳಿಂದ ದಿಢೀರ್‌ ಪ್ರತಿಭಟನೆ

ಶಾಗ್ಯ ಗ್ರಾಮದಿಂದ ಹನೂರು, ಕೊಳ್ಳೇಗಾಲಕ್ಕೆ ಸಮರ್ಪಕ ಬಸ್‌ ವ್ಯವಸ್ಥೆ ಮಾಡಲು ಒತ್ತಾಯ

ಶಾರುಕ್‌ ಖಾನ್‌, ಹನೂರು
ಹನೂರು: ಸಕಾಲಕ್ಕೆ ಸಾರಿಗೆ ಸಂಸ್ಥೆಯ ಬಸ್‌ಗಳು ಬರುತ್ತಿಲ್ಲ. ಇದರಿಂದ ನಮಗೆ ಶಾಲಾ ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ತಡೆದು ಪ್ರತಿಭಟನೆ ನಡೆಸಿದರು.
ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ  ಬಸ್ ನಿಲ್ದಾಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಬಸ್ ತಡೆದು ಸಾರಿಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಾಗ್ಯ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಿಂದ  ದಿನನಿತ್ಯ ನೂರಾರು ವಿದ್ಯಾರ್ಥಿಗಳು ಹನೂರು ಹಾಗೂ ಕೊಳ್ಳೇಗಾಲದ ಶಾಲಾ ಕಾಲೇಜಿಗೆ ತೆರಳಲು ಬರುತ್ತಾರೆ. ಬೆಳಿಗ್ಗೆಯಿಂದಲೂ ಬಸ್ ಗಾಗಿ ಕಾದು ಕುಳಿತರೂ ಬಸ್ ಸಕಾಲಕ್ಕೆ ಬರುವುದಿಲ್ಲ. ಇದರಿಂದ ನಮ್ಮ ಶಿಕ್ಷಣ ಕಲಿಕೆಗೆ ಹಿನ್ನಡೆಯಾಗಿದೆ. ತಡವಾಗಿ ಹೋದರೆ, ಶಾಲಾ ಕಾಲೇಜುಗಳಲ್ಲಿ ಸೇರಿಸುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಅವರು ಯಾವುದೇ ಕ್ರಮಕ್ಕೆ ಮುಂದಾಗದೆ ತಮ್ಮ ಚಾಳಿಯನ್ನು ಮುಂದುವರೆಸುತ್ತಿದ್ದಾರೆ. ಪರೀಕ್ಷೆಗಳು ಹತ್ತಿರ ಬರುತ್ತಿವೆ. ನಮಗೆ ತರಗತಿಗಳು ಮುಖ್ಯವಾಗಿವೆ. ಈ ಸಮಯದಲ್ಲೂ ರೀತಿ ಮಾಡುವುದು ಎಷ್ಟು ಸರಿ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು. 
ಸ್ಥಳಕ್ಕೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಬರಬೇಕು. ವಿದ್ಯಾರ್ಥಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು. ಅಲ್ಲಿಯ ತನಕ ನಾವು ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದರು.  
ಘಟನಾ ಸ್ಥಳಕ್ಕೆ 112 ಪೊಲೀಸ್ ಅಧಿಕಾರಿ ವೆಂಕಟೇಶ್ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಮೊಬೈಲ್‌ ಮೂಲಕ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು.
ಈ ವೇಳೆ ಸಾರಿಗೆ ಅಧಿಕಾರಿಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ನಿಗದಿತ ಸಮಯದಲ್ಲಿ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.