ಪಾಂಡವಪುರ : ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಚಿಕ್ಕಯ್ಯ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದು, ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ರೈತಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ತಾವು ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಅನಿವಾರ್ಯವಾಗಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಯಿತು. ಆದರೇ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ತಾವು ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಬೆಂಬಲ ನೀಡುತ್ತಿರುವುದಾಗಿ ಹೇಳಿದರು. ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಮಾತನಾಡಿ, ಫೋಕಸ್ ಕರ್ನಾಟಕ ಎಂಬ ಯೂ ಟ್ಯೂಬ್ ಚಾನಲ್‍ನಲ್ಲಿ ದರ್ಶನ್ ಪುಟ್ಟಣ್ಣಯ್ಯ ವಿರುದ್ಧ ಅವಹೇಳನಾಕಾರಿ ಸುದ್ದಿಯನ್ನು ಪ್ರಚಾರ ಮಾಡಿದ್ದು, ಅದರ ವಿರುದ್ಧ ರಾಜ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದರು. ರೈತಸಂಘದ ತಾಲೂಕು ಅಧ್ಯಕ್ಷ ಪಿ.ನಾಗರಾಜು ಮಾತನಾಡಿ, ಶುಕ್ರವಾರ ಸಂಜೆ ಲಕ್ಷ್ಮಿಸಾಗರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಚುನಾವಣಾ ಪ್ರಚಾರದ ವೇಳೆ ಉದ್ರೇಕಕಾರಿ ಭಾಷಣ ಮಾಡುವುದರ ಮೂಲಕ ರೈತಸಂಘದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಇದು ನಿಲ್ಲಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಗೋವಿಂದೇಗೌಡ, ಬಲರಾಮು, ಮುನವರ್ ಪಾಷ, ಡಾ.ಬೋರೇಗೌಡ ಚಿಕ್ಕಮರಳಿ, ರಘು ಮುಂತಾದವರು ಇದ್ದರು.
0 ಕಾಮೆಂಟ್‌ಗಳು